Home » ಉಪ್ಪಿನಂಗಡಿ : ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ದಂಪತಿ ನಾಪತ್ತೆ

ಉಪ್ಪಿನಂಗಡಿ : ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ದಂಪತಿ ನಾಪತ್ತೆ

by Praveen Chennavara
0 comments
Uppinangady

Uppinangady: ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ದಂಪತಿ ನಾಪತ್ತೆಯಾಗಿದ್ದು,ಅವರ ಪತ್ತೆಗಾಗಿ ಉಪ್ಪಿನಂಗಡಿ(Uppinangady) ಪೊಲೀಸರಿಗೆ ಮನೆಯೊಡತಿ ದೂರು ನೀಡಲಾಗಿದ್ದು, ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ ಘಟನೆ ಕರಾಯದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು, ಆಗಾಗ ಪರಿಸರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮದ್ಯ ಸೇವನೆಯ ಚಟ ಹೊಂದಿದ್ದ ಇವರು ಅಲ್ಲಲ್ಲಿ ಮಲಗಿಕೊಂಡು ಅಲೆಮಾರಿಯಂತೆ ಜೀವನ ನಡೆಸುತ್ತಿದ್ದರು. ಈ ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗನಿದ್ದು, ಒಂದು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು.

ಈ ಎರಡು ಮಕ್ಕಳನ್ನು ಜೂ. 2ರಂದು ಕರಾಯ ಗ್ರಾಮದ ಮನೆಯಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಈ ದಂಪತಿ ಹೇಳಿದ್ದು, ಮನೆಯೊಡತಿ ಫಾತಿಮಾ ಅವರು ಇದಕ್ಕೆ ಒಪ್ಪಿಕೊಂಡಿದ್ದರು. ಆದರೆ ಆ ಬಳಿಕ ಈ ದಂಪತಿಯ ಪತ್ತೆಯಿರಲಿಲ್ಲ.

ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳ ಲಾಲನೆ ಪಾಲನೆ ಮಾಡಿದ ಫಾತಿಮಾ ಅವರು 2 ದಿನ ಕಳೆದರೂ ಹೆತ್ತವರು ಕಾಣಿಸಿಕೊಳ್ಳದೇ ಹೋದಾಗ ಕಳವಳಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ರವಿವಾರ ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ್ದಾರೆ.

ಮಕ್ಕಳನ್ನು ಬಿಟ್ಟು ಹೋಗಿ ಮೂರು ದಿನವಾದರೂ ಹೆತ್ತವರ ಪತ್ತೆ ಇಲ್ಲದಿರುವುದನ್ನು ಗಮನಿಸಿದ ಫಾತಿಮಾ ಸೋಮವಾರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿ, ಮಕ್ಕಳನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗಿರುವ ದಂಪತಿಯನ್ನು ಪತ್ತೆ ಹಚ್ಚಲು ವಿನಂತಿಸಿದ್ದಾರೆ.

ದಂಪತಿಯ ಪೈಕಿ ಗಂಡನ ಹೆಸರು ತಿಳಿದಿಲ್ಲವೆಂದೂ, ಪತ್ನಿಯ ಹೆಸರು ಆಕೆಯ ಮಗ ತಿಳಿಸಿದ ರೀತಿಯಲ್ಲಿ ಲೀಲಾ ಎಂಬುದಾಗಿದೆ ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ.

ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

You may also like

Leave a Comment