Road Accident: ಈಗಾಗಲೇ ಅತ್ತಿಬೆಲೆ ಪಟಾಕಿ ದುರಂತದಲ್ಲಿ 14 ಮಂದಿ ಸಜೀವ ದಹನರಾಗಿದ್ದು, ಈ ಕುರಿತು ಸ್ಥಳ ಪರಿಶೀಲನೆ ಮಾಡಲು ಮತ್ತು ಮರಣ ಹೊಂದಿದ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಸಿಎಂ ಸಿದ್ದರಾಮಯ್ಯ ಬರುವ ದಾರಿಯಲ್ಲೇ ಅಪಘಾತವೊಂದು (Road Accident) ನಡೆದಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೊಸೂರು ಹೆದ್ದಾರಿ ಕಿತ್ತಗಾನಹಳ್ಳಿ ಗೇಟ್ ಬಳಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಗಂಭೀರ ಗಾಯಗೊಂಡಿದ್ದಾರೆ.
ಮಾಹಿತಿ ಪ್ರಕಾರ, ಲಾರಿ ವೇಗವಾಗಿ ಬಂದು ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿದ್ದು ರಕ್ತಸ್ರಾವವಾಗಿ ಒದ್ದಾಡುತ್ತಿದ್ದ ದಂಪತಿಯನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳ ಕುರಿತು ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಆಗಮಿಸಿದ್ದಾರೆ.
ಇನ್ನು ಕಾರು ಅಪಘಾತ ಮಾಡಿದ ಲಾರಿ ಚಾಲಕ ಪರಾರಿ ಆಗಿದ್ದಾನೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
