Highcourt: ಜನೌಷಧಿ ಕೇಂದ್ರಗಳ ಸ್ಥಗಿತಕ್ಕೆ ಹೊರಡಿಸಿದ್ದ ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಇದೀಗ ತಡೆ ನೀಡಿದೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ಭಾರೀ ವೀರೋಧಗಳು ವ್ಯಕ್ತವಾಗಿದ್ದವು. ಅಲ್ಲದೇ ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು (ಜುಲೈ 08) ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ಹೊರಡಿಸಿದೆ.
ಜನೌಷಧ ಕೇಂದ್ರ ತೆರೆಯಲು ಮೂಲಸೌಕರ್ಯ ಕಲ್ಪಿಸಲು ವೆಚ್ಚವಾಗಿದೆ. ಜನರಿಗೆ ಶೇ.50ರಿಂದ ಶೇ.90ರ ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಸರ್ಕಾರದ ಆದೇಶದಿಂದ ತಮ್ಮ ಮೂಲಭೂತ ಹಕ್ಕಿಗೆ ಧಕ್ಕೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆವರೆಗೆ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.
ರಾಜ್ಯ ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಅಂದರೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಮಾತ್ರ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿಗಳ ಕೈಸೇರಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಪಿಎಂ ಜನ ಔಷಧ ಕೇಂದ್ರಗಳು ಬಾಗಿಲು ಮುಚ್ಚಿವೆ. ಇದಕ್ಕೆ ಬಿಜೆಪಿ ಸೇರಿದಂತೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಡವರಿಗೆ ಕಡಿಮೆ ದರದಲ್ಲಿ ನೀಡುವ ಜನೌಷಧ ಕೇಂದ್ರಗಳನ್ನು ಮುಚ್ಚುವುದು ಸರಿಯಲ್ಲ. ರಾಜ್ಯ ಸರ್ಕಾರ ಆದೇಶವನ್ನು ವಾಪಸ್ ಪಡೆಯಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದವು.
