Belthangady: ಬೆಳ್ತಂಗಡಿ : ಬೆಳ್ತಂಗಡಿ (Belthangady) ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಎಂಬ ವೃದ್ಧೆಯನ್ನು ಸಂಬಂಧಿ ಯುವಕ ಅಶೋಕ್ ಹತ್ಯೆಗೈದು ಹಣ, ಚಿನ್ನಾಭರಣ ಸಹಿತ ಪರಾರಿಯಾಗಿದ್ದ.
ಅಕ್ಕು ಅವರು ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದು, ಮಗ ಮತ್ತು ಸೊಸೆ ಕೆಲಸಕ್ಕೆ ಹೋಗಿದ್ದರು. ಮೊಮ್ಮಗಳು ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕರೆದಾಗ, ಅಜ್ಜಿ ಮನೆಯಲ್ಲಿ ಇರಲಿಲ್ಲ. ನಂತರ ಹೊರಗಡೆ ಬಂದು ನೋಡಿದಾಗ ಅಕ್ಕು ಅವರು ತಮ್ಮ ಮನೆಯ ಸಮೀಪದ ಹಟ್ಟಿಯ ಹಿಂದೆ ಬಿದ್ದಿರುವುದು ಕಂಡು ಬಂದು ಪೋಷಕರಿಗೆ ಮಾಹಿತಿ ತಿಳಿಸಿದ್ದಳು. ಅವರು ಬಂದು ನೋಡಿದಾಗ ಅಕ್ಕು ಅವರು ಮೃತಪಟ್ಟಿದ್ದು, ಅವರ ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಮನೆಯಲ್ಲಿದ್ದ ನಗದನ್ನು ಯಾರೋ ದರೋಡೆಗೈದಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಲಾಗಿತ್ತು.
ಬಳಿಕ ಆರೋಪಿ ಅಶೋಕನನ್ನು ಪೊಲೀಸರು ಬಂಧಿಸಿದ್ದರು.
ಶುಗರ್ ಹಾಗೂ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದ ಅಶೋಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಬುಧವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ: Tumkur: ಜಾತ್ರಾ ಮಹೋತ್ಸವದಲ್ಲಿ ಕೊಂಡ ಹಾಯುವಾಗ ನೂಕುನುಗ್ಗಲು : 30 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು
