NDA: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಬೆನ್ನಲ್ಲೇ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದಲ್ಲಿ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಇದೀಗ ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ಎನ್‌ಡಿಎ ಮೈತ್ರಿಕೂಟವು ಈ ಇಬ್ಬರು ನಾಯಕರ ಹೆಗಲಿಗೆ ವಹಿಸಿದೆ ಎನ್ನಲಾಗಿದೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್ ಡಿಎ) ಗುರುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಆಡಳಿತ ಪಕ್ಷದ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರ ನೀಡಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಹೌದು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಅಭ್ಯರ್ಥಿಯ ಹೆಸರನ್ನು ಆಗಸ್ಟ್ 12ರಂದು ಘೋಷಿಸುವ ಸಾಧ್ಯತೆಯಿದೆ. ಸಂಸತ್ತಿನ ಕಟ್ಟಡದಲ್ಲಿ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ನಾಯಕರ ನಿರ್ಣಾಯಕ ಸಭೆಯ ನಂತರ ಅವರ ಈ ಹೇಳಿಕೆಗಳು ಬಂದಿವೆ.
ಅಲ್ಲದೆ ಮೈತ್ರಿಕೂಟದ ನಾಯಕರು ಸರ್ವಾನುಮತದಿಂದ ಅಭ್ಯರ್ಥಿ ಆಯ್ಕೆ ನಿರ್ಧಾರವನ್ನು ಲೋಕಸಭೆಯ ಸದನ ನಾಯಕರಾದ ಮೋದಿ ಮತ್ತು ರಾಜ್ಯಸಭೆಯ ಸದನ ನಾಯಕರಾದ ನಡ್ಡಾ ಅವರಿಗೆ ವಹಿಸಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಕೇಳಿ ಬರುತ್ತಿರುವ ಪ್ರಮುಖ ಹೆಸರುಗಳು
ಎನ್ ಡಿಎ ಅಭ್ಯರ್ಥಿಯಾಗಿ ಬಿಹಾರ ಮುಖ್ಯಮಂತ್ರಿ ಮತ್ತು ಎನ್‌ಡಿಎ ಮಿತ್ರಪಕ್ಷ ಜೆಡಿ (ಯು) ನಾಯಕ ನಿತೀಶ್ ಕುಮಾರ್, ಮತ್ತೊಬ್ಬ ಜೆಡಿ(ಯು) ನಾಯಕ ಹರಿವಂಶ್ ಸಿಂಗ್, ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ದಿವಂಗತ ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್ ನಾಥ್ ಠಾಕೂರ್ ,ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಹೆಸರುಗಳು ಕೇಳಿ ಬರುತ್ತಿವೆ.
