Karur Stampede: ನಟ, ರಾಜಕಾರಣಿ ವಿಜಯ್ (Vijay) ಅವರ ಚುನಾವಣಾ ರ‍್ಯಾಲಿಯ ವೇಳೆ ಸಂಭವಿಸಿದ ಕರೂರು ಕಾಲ್ತುಳಿತ (Karur Stampede) ದುರಂತದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ವಹಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಸಿಬಿಐ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ವತಂತ್ರ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಎಸ್‌ಐಟಿಯಲ್ಲಿ (SIT) ತಮಿಳುನಾಡಿನ ಪೊಲೀಸರೇ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿತ್ತು. ಅರ್ಜಿ ವಿಚಾರಣೆ ಬಳಿಕ ಕರೂರು ಕಾಲ್ತುಳಿತ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
