2nd PUC: ಇತ್ತೀಚಿಗಷ್ಟೇ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ತೇರ್ಗಡೆಯಗಲು ಕನಿಷ್ಠ ಅಂಕವನ್ನು ಶೇಕಡ 33ಕ್ಕೆ ಇಳಿಸಿ ಆದೇಶಿಸಿತ್ತು. ಇದರ ಬೆನ್ನಲ್ಲೇ ಇದೀಗ ಶಿಕ್ಷಣ ಇಲಾಖೆಯು ಪಿಯುಸಿ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠಾಂಗಗಳನ್ನು ನಿಗದಿ ಮಾಡಿ ಆದೇಶ ಹೊರಡಿಸಿದೆ.
ಹೌದು, ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿ ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 24 ಅಂಕಗಳನ್ನು ಪ್ರಾಯೋಗಿಕ ಪರೀಕ್ಷೆ ಇರುವ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 21 ಅಂಕಗಳನ್ನು ಪಡೆಯುವುದು ಕಡ್ಡಾಯ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.
ವಿಷಯವಾರು ಶೇಕಡ 33 ಅಂಕ ಪಡೆಯಲು ಎಸ್‌ಎಸ್‌ಎಲ್ಸಿಯಂತೆ ಪ್ರಾಯೋಗಿಕ ಅಥವಾ ಆಂತರಿಕ ಮೌಲ್ಯಮಾಪನದಲ್ಲಿ ಪೂರ್ಣ ಅಂಕ ಪಡೆದರೆ ಅದೆಲ್ಲವೂ ಪಾಸ್ ಅಂಕಕ್ಕೆ ಪರಿಗಣನೆಯಾಗುವುದಿಲ್ಲ. ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಲಾಗಿದೆ.
ಹೀಗಾಗಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ, ವಿದ್ಯುನ್ಮಾನಶಾಸ್ತ್ರ ಮತ್ತು ಗೃಹವಿಜ್ಞಾನ ವಿಷಯಗಳಿಗೆ 70 ಅಂಕಗಳ ಲಿಖಿತ ಪರೀಕ್ಷೆಯನ್ನು ಹಾಗೂ 30 ಅಂಕಗಳಿಗೆ ಪ್ರಾಯೋಗಿಕ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಲಿಖಿತ ಪರೀಕ್ಷೆಯಲ್ಲಿ ಗರಿಷ್ಠ 70 ಅಂಕಗಳಿಗೆ, ಕನಿಷ್ಠ 21 ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ.
