PM Modi: ರೈಲ್ವೆ ಇಲಾಖೆಯ ಸಿಬ್ಬಂದಿಗಾಗಿ ನಡೆಯುವ ಬಡ್ತಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು, ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕೆಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರೈಲ್ವೆ ಇಲಾಖೆಯ ಪರೀಕ್ಷೆಯನ್ನು ಕನ್ನಡದಲ್ಲಿಯು ನಡೆಸಲು ಅನುಮತಿ ಕೊಟ್ಟಿದ್ದಾರೆ.
ನೈರುತ್ಯ ರೈಲ್ವೆ ವಲಯದಲ್ಲಿ ಕಳೆದ ವರ್ಷ ಸಹಾಯಕ ಲೋಕೋಪೈಲೆಟ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ(exam)ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆ ಮೂಲಕ ಕನ್ನಡಿಗರಿಗೆ ಅನ್ಯಾಯವೆಸಗಲಾಗಿತ್ತು. ಆಗ ಸಚಿವ ವಿ. ಸೋಮಣ್ಣ (V Somanna) ಕನ್ನಡದಲ್ಲೇ ಪರೀಕ್ಷೆಗೆ ಆದೇಶಿಸಿದ್ದರು. ಆದರೆ ಇಲಾಖೆ ಕೆಲ ಪರೀಕ್ಷೆಗಳಿಗೆ ಮಾತ್ರ ಕನ್ನಡಕ್ಕೆ ಅವಕಾಶ ನೀಡಿ ಬಳಿಕ ತೆಗೆದುಹಾಕಿದೆ. ಬೆಂಗಳೂರು ವಿಭಾಗದಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಕೇವಲ ಹಿಂದಿ-ಇಂಗ್ಲಿಷ್‌ನಲ್ಲಿ ಪರೀಕ್ಷೆ ಬರೆಯುವಂತೆ ಇಲಾಖೆ ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು. ಆ ಮೂಲಕ ಸಚಿವರ ಆದೇಶಕ್ಕೂ ಬೆಲೆಯಿಲ್ಲದಂತಾಗಿದೆ. ಇದರ ಬೆನ್ನಲ್ಲೇ ಇದೀಗ ವಿ ಸೋಮಣ್ಣ ಅವರು ರೈಲ್ವೆಯ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕೆಂದು ತಿಳಿಸಿದ್ದರು. ಅಲ್ಲದೆ ಇದೀಗ ರೈಲ್ವೆ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮತಿಸಿದ್ದಾರೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನಗರದ ಹೊರವಲಯದ ಸಂಸದರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಕನ್ನಡಿಗರಿಗೆ ಅವಕಾಶ ನೀಡುವಂತೆ ತಾವು ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾಗಿ ತಿಳಿಸಿದರು. ಇದಕ್ಕೆ ಮೋದಿ ಅವರು ಸಮ್ಮತಿಸಿದರು ಎಂದು ಮಾಹಿತಿ ನೀಡಿದರು.
