ಧರ್ಮಸ್ಥಳ: ಸೌಜನ್ಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ಇದನ್ನು ಪರಿಶೀಲನೆ ಮಾಡಿದ ಸುಪ್ರೀಂ ಮುಂದಿನ ವಿಚಾರಣೆಯನ್ನು ಮಾರ್ಚ್ 23 ಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನೆ ಮಾಡಿ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಜಸ್ಟೀಸ್ ಸಂಜಯ್‌ಕುಮಾರ್ ಪೀಠದ ಮುಂದೆ ನಡೆಯಿತು.
ಸೌಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು ಸೆಷನ್ಸ್ ನ್ಯಾಯಾಲಯ ಹಾಗೂ ನಂತರ ಸಿಬಿಐ ನ್ಯಾಯಾಲಯವು ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಖುಲಾಸೆ ಮಾಡಿತ್ತು. ಈ ತೀರ್ಪನ್ನು ಪ್ರಶ್ನೆ ಮಾಡಿ ಪ್ರಕರಣದ ಮರು ತನಿಖೆಗೆ ಆಗ್ರಹ ಮಾಡಿ ಸೌಜನ್ಯ ತಾಯಿ ಕುಸುಮಾವತಿ ಗೌಡ ಅವರು ಮೊದಲು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ಹೈಕೋರ್ಟ್ ದ್ವಿಸದಸ್ಯ ಪೀಠ ವಜಾ ಮಾಡಿತ್ತು. ಈ ಹೈ ಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ವಿಶೇಷ ಅನುಮತಿ ಮೇಲ್ಮನವಿ ಅರ್ಜಿ ಸಲ್ಲಿಸುವ ಮೂಲಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಮೇಲ್ಮನವಿ ಅರ್ಜಿಯಲ್ಲಿ ಕೆಲವು ತಾಂತ್ರಿಕ ದೋಷಗಳಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಅದನ್ನು ಡಿಫೆಕ್ಟ್ ಲಿಸ್ಟ್‌ನಲ್ಲಿ ಸೇರಿಸುತ್ತು. ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಲು ಅರ್ಜಿದಾರರ ಪರ ವಕೀಲರಿಗೆ 90 ದಿನಗಳ ಕಾಲಾವಕಾಶ ನೀಡಿತ್ತು. ದೋಷಗಳನ್ನು ಸರಿಪಡಿಸಿ ಕುಸುಮಾವತಿ ಗೌಡ ಅವರ ಪರ ವಕೀಲರು 2025 ರ ನವೆಂಬರ್ 19 ರಂದು ಅರ್ಜಿಯನ್ನು ಮರುಸಲ್ಲಿಕೆ ಮಾಡಿದ್ದು, ಇದರ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಿಕೆ ಮಾಡಿದೆ.
