

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಆಯುಕ್ತರಿಗೆ ಆಶ್ಲೀಲ ಪದ ಬಳಸಿ ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜೀವ್ ಗೌಡ ಅವರನ್ನು ಪಕ್ಷದಿಂದ ಆಮಾನತುಗೊಳಿಸಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿಡ್ಲಘಟ್ಟ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಾಜೀವ್ ಗೌಡ ಅನಧಿಕೃತ ಬ್ಯಾನರ್ ತೆಗೆಸಿದ ವಿಚಾರದಲ್ಲಿನಗರಸಭೆ ಆಯುಕ್ತರನ್ನು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದು ಜಾಲತಾಣಗಳಲ್ಲಿ ವೈರಲ್ ಆಗಿತ್ತು. ರಾಜೀವ್ ಗೌಡ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿದ ಬಳಿಕ ಗಂಭೀರತೆ ಮನದಟ್ಟಾಗಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತ್ ಮಾಡಲಾಗಿದೆ ಎಂದು ರೆಹಮಾನ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ













