School: ಮೊಟ್ಟೆ, ಬಾಳೆಹಣ್ಣು ವಿತರಿಸುವ ಕಾರ್ಯದಿಂದ ಶಿಕ್ಷಕರು ಪಾಠದಿಂದ ವಿಮುಖರಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಕರ ಹೆಚ್ಚಿನ ಜವಾಬ್ದಾರಿ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ವಿತರಿಸುವ ಶಿಕ್ಷಕರ ಜವಾಬ್ದಾರಿಯನ್ನು ಕಡಿಮೆ ಮಾಡಲಾಗುವುದು. ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವ ಸಮಯಕ್ಕಿಂತ ಮಧ್ಯಾಹ್ನದ ಬಿಸಿಯೂಟದ ಸಿದ್ಧತೆಗೆ ಹೆಚ್ಚಿನ ಸಮಯ ವ್ಯಯ ಮಾಡುತ್ತಿದ್ದಾರೆ. ಇದರಿಂದ ಶಿಕ್ಷಕರ ಮೂಲ ವೃತ್ತಿಗೆ ಧಕ್ಕೆಯಾಗುತ್ತಿದೆ. ಮಕ್ಕಳು ಶಿಕ್ಷಣದಿಂದ ವಿಮುಖರಾಗುತ್ತಿದ್ದಾರೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.ಸರ್ಕಾರಿ ಶಾಲಾ ಶಿಕ್ಷಕರಿಗೆ ಇರುವ ಆರೋಗ್ಯ ಸಂಜೀವಿನಿ ವಿಮಾ ಯೋಜನೆಯನ್ನು ಅನುದಾನ ರಹಿತ ಶಾಲಾ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ಸರ್ಕಾರಿ ಶಾಲಾ ಶಿಕ್ಷಕರಿಗೆ ಹಂತ ಹಂತವಾಗಿ ಮುಂಬಡ್ತಿ ನೀಡದೆ ಏಕಕಾಲಕ್ಕೆ ಬಡ್ತಿ ನೀಡುವ ಬಗ್ಗೆ ಇನ್ನೆರಡು ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದ್ದಾರೆ.
