Ballary : ಅತ್ಯಾಚಾರ ಸಂತ್ರಸ್ತಿಯ ಹೆಸರನ್ನು ಬಹಿರಂಗಪಡಿಸಿದ ಕಾರಣಕ್ಕಾಗಿ ಮಾಜಿ ಸಚಿವ ಬಿಜೆಪಿ ನಾಯಕ ಶ್ರೀರಾಮುಲು ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.


ಹೌದು, ಪೋಕ್ಸೊ ಸಂತ್ರಸ್ತೆಯ ಹೆಸರನ್ನು ಬಹಿರಂಗವಾಗಿ ಪ್ರಸ್ತಾಪಿಸಿ, ಆಕೆಯ ಗುರುತನ್ನು ಜಗಜ್ಜಾಹೀರು ಮಾಡಿದ ಗಂಭೀರ ಆರೋಪದ ಮೇಲೆ ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಬಳ್ಳಾರಿಯ ಎಪಿಎಂಸಿ ಆವರಣದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಭಾಷಣ ಮಾಡುತ್ತಿದ್ದ ಶ್ರೀರಾಮುಲು ಅವರು, ಬಳ್ಳಾರಿ ಶಾಸಕ ಭರತ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ಬಳ್ಳಾರಿಯಲ್ಲಿ ಡ್ರಗ್ಸ್ ಮಾಫಿಯಾ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಮಾತನಾಡುವಾಗ, ಇತ್ತೀಚೆಗೆ ದೌರ್ಜನ್ಯಕ್ಕೊಳಗಾಗಿದ್ದ ಅಪ್ರಾಪ್ತ ಬಾಲಕಿಯ ಹೆಸರು, ಆಕೆಯ ಸಮುದಾಯ ಹಾಗೂ ಆಕೆ ಓದುತ್ತಿರುವ ಶಿಕ್ಷಣ ಸಂಸ್ಥೆಯ ಹೆಸರನ್ನು ಬಹಿರಂಗಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಭಾನುವಾರ ಎಪಿಎಂಸಿ ಠಾಣೆ ಇನ್‌ಸ್ಪೆಕ್ಟರ್ ನೀಡಿದ ದೂರು ಆಧರಿಸಿ ಮಹಿಳಾ ಠಾಣೆ ಪೊಲೀಸರು ಪೊಕ್ಸೊ ಕಾಯ್ದೆಯ ಕಲಂ 23(1) (2) ಮತ್ತು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಸೆಕ್ಷನ್ 74ರ ಅಡಿಯಲ್ಲಿ ಕೇಸು ದಾಖಲಿಸಿದ್ದಾರೆ.
