Delhi : ದೆಹಲಿಯ ಕೆಂಪು ಕೋಟೆ ಬಳಿ I20 ಕಾರು ಸ್ಫೋಟಗೊಂಡು ಎಂಟಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇದರ ಬೆನ್ನಲ್ಲೇ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಎಕ್ಸ್ ಮೂಲಕ ಪ್ರತಿಕ್ರಿಯಿಸಿದ್ದು, ಇಂದು ಸಂಜೆ ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದು, ಅವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಸ್ಥಿತಿ ಅವಲೋಕಿಸಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಅಮಿತ್ ಶಾ ಅವರು ಘಟನೆಯ ಬಗ್ಗೆ ಮಾಹಿತಿಯನ್ನು ವಿವರಿಸಿದ್ದು, ಸ್ಫೋಟದ ಮಾಹಿತಿ ಬಂದ ಹತ್ತೇ ನಿಮಿಷಗಳಲ್ಲಿ ದೆಹಲಿ ಕ್ರೈಂ ಬ್ರ್ಯಾಂಚ್ ಮತ್ತು ದೆಹಲಿ ಸ್ಪೆಷಲ್ ಸೆಲ್‌ನ ತಂಡಗಳು ಸ್ಥಳಕ್ಕೆ ಭೇಟಿ ನೀಡಿವೆ. ವಿಧಿವಿಜ್ಞಾನ ಪ್ರಯೋಗಾಲಯ ತಂಡದೊಂದಿಗೆ ಎನ್‌ಎಸ್‌ಜಿ ಮತ್ತು ಎನ್‌ಐಎ ತಂಡಗಳೂ ಸ್ಥಳಕ್ಕೆ ಆಗಮಿಸಿದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ಪ್ರಾರಂಭಿಸಿವೆ ಎಂದು ಮಾಹಿತಿ ನೀಡಿದ್ದಾರೆ.
ಅಲ್ಲದೆ ಸುತ್ತಮುತ್ತ ಪ್ರದೇಶಗಳಲ್ಲಿರುವ ಎಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನ ಪರಿಶೀಲಿಸಲು ಆದೇಶಿಸಲಾಗಿದೆ. ಅಲ್ಲದೇ ನಾನು ದೆಹಲಿ ನಗರ ಪೊಲೀಸ್ ಮತ್ತು ವಿಶೇಷ ಸೆಲ್ ಮುಖ್ಯಸ್ಥರೊಂದಿಗೆ ಮಾತನಾಡಿದ್ದೇನೆ. ದೆಹಲಿ ಸಿಪಿ ಮತ್ತು ವಿಶೇಷ ಶಾಖೆಯ ಉಸ್ತುವಾರಿ ಸ್ಥಳದಲ್ಲಿದ್ದಾರೆ. ಎಲ್ಲಾ ಸಾಧ್ಯತೆಗಳನ್ನ ಪರಿಗಣಿಸಿ ಸಂಪೂರ್ಣ ತನಿಖೆ ನಡೆಸುತ್ತೇವೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಿ ಸಾರ್ವಜನಿಕರ ಮುಂದಿಡುತ್ತೇವೆ ಎಂದು ಹೇಳಿದ್ದಾರೆ.
