
Dinesh Gundu Rao: ರಾಜ್ಯದ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರು ಮತ್ತು ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ವೇತನ ಮತ್ತು ಪ್ರೋತ್ಸಾಹಧನ ಬಿಡುಗಡೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.

ಕೇಂದ್ರ ಸರ್ಕಾರದಿಂದ ಲಭ್ಯವಾಗಿರುವ 175.75 ಕೋಟಿ ರೂಪಾಯಿ ಅನುದಾನವನ್ನು ಈಗಾಗಲೇ ಜಿಲ್ಲೆಗಳಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರದಲ್ಲೇ ನೌಕರರ ಕೈಸೇರಲಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಆರೋಗ್ಯ ಕಾರ್ಯಕರ್ತರ ಹಿತದೃಷ್ಟಿಯಿಂದ ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಜನವರಿ 8, 2026 ರಂದು ಕೇಂದ್ರ ಸರ್ಕಾರವು 175.75 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಅದಕ್ಕೆ ರಾಜ್ಯದ ಪಾಲನ್ನು ಸೇರಿಸಿ ಪ್ರಸ್ತುತ ಜಿಲ್ಲಾ ಮಟ್ಟಕ್ಕೆ ಹಣ ರವಾನಿಸುವ ಪ್ರಕ್ರಿಯೆ ನಡೆಯುತ್ತಿದೆ.
