Nalin Kumar Kateel: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿದ ಆರೋಪ ಕುರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಈ ಮೂಲಕ ನಳಿನ್ ಕುಮಾರ್ ಕಟೀಲ್‌ಗೆ ಬಿಗ್ ರಿಲೀಫ್ ದೊರಕಿದಂತಾಗಿದೆ.
ಕಳೆದ ವರ್ಷ ಡಿ.13 ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ ಅಯ್ಯರ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಮಾಡಿದ ಮುಖ್ಯ ನ್ಯಾ. ಸಂಜೀವ್ ಖನ್ನಾ ಹಾಗೂ ನ್ಯಾ.ಸಂಜಯ್ ಕುಮಾರ್ ನೇತೃತ್ವದ ಪೀಠವು ” ಅರ್ಜಿಯಲ್ಲಿ ಯಾವುದೇ ನಿರ್ದಿಷ್ಟ ಆರೋಪಗಳಿಲ್ಲ. ಇದೊಂದು ಊಹೆಯ ದೂರಾಗಿದೆ” ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿದೆ.
ಅಯ್ಯರ್ ಅವರ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದು, ಜಾರಿ ನಿರ್ದೇಶನಾಲಯದಂಥ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಚುನಾವಣಾ ಬಾಂಡ್ ಯೋಜನೆಯಡಿ ಸುಲಿಗೆ ನಡೆಸಲಾಗಿದೆ ಎಂಬ ಭೂಷಣ್ ಅವರ ವಾದವನ್ನು ತಳ್ಳಿ ಹಾಕಿದೆ ನ್ಯಾಯಪೀಠ. ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ ಎಂದು ಹೇಳಿದೆ.
