ರಾಷ್ಟ್ರರಾಜಧಾನಿಯಲ್ಲಿ ಮತ್ತೊಮ್ಮೆ ಶಾಂತಿ ಕದಡುವ ಘಟನೆ ನಡೆದಿದೆ. ಹನುಮ ಜಯಂತಿಯ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಪೊಲೀಸ್ ಸಿಬ್ಬಂದಿಗಳು ಗಾಯಗೊಂಡ ಘಟನೆ ದೆಹಲಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ದುಷ್ಕರ್ಮಿಗಳು ಅನೇಕ ವಾಹನಗಳಿಗೆ ಹಾನಿ ಮಾಡಿದ್ದು, ಪೊಲೀಸ್ ಸಿಬ್ಬಂದಿಯು ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾಬು ಜಗಜೀವನ ರಾಮ್ ಮೆಮೊರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧಿಸಿದ ದೃಶ್ಯಾವಳಿಗಳು ಲಭ್ಯವಾಗಿದ್ದು, ರಸ್ತೆಯ ವಿವಿಧ ಬದಿಗಳಲ್ಲಿ ಜನರ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿರುವುದು ವೀಡಿಯೋದಲ್ಲಿ ಕಾಣಸಿಗುತ್ತದೆ. ಪೊಲೀಸರು ಪರಿಸ್ಥಿತಿ ನಿಭಾಯಿಸಲು ಮುಂದಾದಾಗ ಅವರ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಘಟನೆಯ ಬಗ್ಗೆ ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನ ಟ್ವಿಟ್ ಮಾಡಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಶಾಂತಿ ಕದಡುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದಲ್ಲದೆ, ಪ್ರದೇಶದಲ್ಲಿ ಗಸ್ತು ಹೆಚ್ಚಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಮತ್ತು ಸುಳ್ಳು ಸುದ್ದಿಗಳಿಗೆ ಗಮನ ಕೊಡಬೇಡಿ ಎಂದು ನಾಗರಿಕರಿಗೆ ಮನವಿ ಮಾಡಿದ್ದಾರೆ.
ಘಟನೆಯು ತಮ್ಮ ಗಮನಕ್ಕೆ ಬರುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿ ಪೊಲೀಸ್ ಆಯುಕ್ತ ಮತ್ತು ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್ ಅವರೊಂದಿಗೆ ಮಾತನಾಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಕಾಪಾಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಕಿಡಿಗೇಡಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಲ್ಲು ತೂರಾಟದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರೊಂದಿಗೆ ಕೇಂದ್ರವು ಸುಮಾರು 200 ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿಯನ್ನು ನಿಯೋಜಿಸಿದೆ. ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಹಿಂಸಾಚಾರ ಮತ್ತು ಕಲ್ಲು ತೂರಾಟದ ಘಟನೆಗಳನ್ನು ಖಂಡಿಸಿದ್ದಾರೆ. ಈ ದುಷ್ಕೃತ್ಯದ ಹಿಂದೆ ಇರುವವರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಗುರುತಿಸಲಾದ ಎಲ್ಲಾ ಸೂಕ್ಷ್ಮ ಪ್ರದೇಶಗಳು/ಸ್ಥಳಗಳಿ ಪಡೆಗಳನ್ನು ನಿಯೋಜಿಸಲು ಮತ್ತು ಹಿರಿಯ ಅಧಿಕಾರಿಗಳ ನೇರ ಮೇಲ್ವಿಚಾರಣೆ ಮತ್ತು ಜವಾಬ್ದಾರಿಯ ಅಡಿಯಲ್ಲಿ ಮೊಬೈಲ್ ಗಸ್ತು ಮತ್ತು ಜಾಗರೂಕತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.
