Heavy Rain: ಕರ್ನಾಟಕದಾದ್ಯಂತ ಒಂದು ವಾರ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಮಳೆಯ ಜೊತೆ 30-40ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯುವ ಕುರಿತು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗಿಲ್ಲಿ ಮಳೆಯ ರುದ್ರನರ್ತನ ಹೆಚ್ಚಿದೆ. ಇಂದು ಕೂಡಾ ಭಾರೀ ಮಳೆಯ ಸಂಭವವಿದ್ದು, ಈಗಾಗಲೇ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಕೊಡಗು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟೇಶ್ ರಾಜಾ ಆದೇಶ ಹೊರಡಿಸಿದ್ದಾರೆ.
