Bangalore: ರಾಜ್ಯದ ಅರಣ್ಯ ಪ್ರದೇಶದೊಳಗೆ ದನ ಕರು, ಕುರಿ, ಮೇಕೆ ಸೇರಿ ಯಾವುದೇ ರೀತಿಯ ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡಲಾಗುತ್ತಿದೆ. ಇದರಿಂದ ಅರಣ್ಯದಲ್ಲಿನ ಸಣ್ಣಪುಟ್ಟ ಸಸಿಗಳು ಹಾಳಾಗುತ್ತಿದ್ದು, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ. ಸಸ್ಯಹಾರಿ ವನ್ಯಜೀವಿಗಳಿಗೂ ಮೇವಿನ ಕೊರತೆ ಉಂಟಾಗುತ್ತಿದ್ದು, ಜಾನುವಾರುಗಳು ಕಾಡಿಗೆ ಮೇಯಲು ಹೋದರೆ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಗಳಿರುತ್ತದೆ ಎನ್ನುವ ದೂರುಗಳು ಬಂದಿದೆ ಎಂದು ಹೇಳಿದ್ದಾರೆ.
ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲು ನಿಯಮದಲ್ಲಿ ಅವಕಾಶವಿಲ್ಲ ಹೀಗಾಗಿ ಮೇಕೆ, ಕುರಿ, ದನ-ಕರುಗಳು ಸೇರಿದಂತೆ ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದು, ಇದನ್ನು ಪರಿಶೀಲನೆ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಮದ್ರಾಸ್ ಹೈಕೋರ್ಟ್ ಕೂಡ ತಮಿಳುನಾಡು ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ತೀರ್ಪು ನೀಡಿದೆ. ಪರಿಣಾಮವಾಗಿ ತಮಿಳುನಾಡು ರಾಜ್ಯದಿಂದಲೂ ನಮ್ಮ ರಾಜ್ಯದ ಅರಣ್ಯ ಪ್ರದೇಶಕ್ಕೆ ದನ-ಕರುಗಳನ್ನು ತಂದು ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಬೇಕು ಎಂದು ಆದೇಶಿಸಿದ್ದಾರೆ.
