Jan Aushadhi Kendra: ಕೇಂದ್ರ ಸರ್ಕಾರವು ಬಡ ಜನರಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ತೆರೆದ ‘ಜನ ಔಷಧ’ ಕೇಂದ್ರಗಳನ್ನು ಇನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.
ಹೌದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನ ಔಷಧಿ ಕೇಂದ್ರಗಳಲ್ಲಿ ಬಡವರು ಮತ್ತು ಮದ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಿಗಳು ದೊರೆಯುತ್ತವೆ. ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲೂ ಜನ ಔಷಧಿ ಕೇಂದ್ರಗಳಿವೆ. ಈ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದೆ.
ಜನ ಔಷಧಿ ಕೇಂದ್ರ ಬಂದ್ ಮಾಡಲು ಕಾರಣವೇನು?
ರಾಜ್ಯ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ಹೊರಗಡೆಯಿಂದ ತರುವಂತೆ ರೋಗಿಗಳಿಗೆ ಸಲಹಾ ಚೀಟಿಗಳನ್ನು ನೀಡುವುದನ್ನು ಸರ್ಕಾರ ನಿಷೇಧಿಸಿದೆ. ಈ ಮೂಲಕ ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ತರಹದ ಔಷಧಿಗಳನ್ನು ಹೊರಗೆ ಖರೀದಿಸುವಂತೆ ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು ಸರ್ಕಾರದ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನಲ್ಲಿನ ಜನ ಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವಿರುದ್ಧವಾಗಿದೆ. ಈ ಕಾರಣದಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನ ಔಷಧಿ ಕೇಂದ್ರಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
