Mangaluru: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ (ಎ.18) ರಂದು ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರು ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಸಭೆ ನಡೆಸಲಿದೆ. ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್ ಆದೇಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ರಸ್ತೆ ಸಂಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
ಮಂಗಳೂರಿನ ರಾಜೇಶ್ ಅರ್ಕುಳ ಎಂಬುವವರು ನೀಡಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ವಕ್ಫ್ ತಿದ್ದುಪಡಿ ವಿಚಾರ ಸುಪ್ರೀಂ ಕೋರ್ಟ್ ಪರಿಗಣಿಸುವಾಗ ಪ್ರತಿಭಟನೆ ಸರಿಯಲ್ಲ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಎನ್‌ಹೆಚ್ 73 ಬಂದ್ ಮಾಡಿ ಪ್ರತಿಭಟನೆ ಮಾಡುವಂತಿಲ್ಲ. ಸರಕಾರ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು ಎಂದು ಪೀಠ ಹೇಳಿದೆ.
ಬಿಸಿರೋಡ್‌ನಿಂದ ಪಡೀಲ್‌ವರೆಗೆ ವಾಹನ ಸಂಚಾರ ನಿರ್ಬಂಧಿತವಾಗಿರುವುದನ್ನು ಪ್ರಶ್ನೆ ಮಾಡಿ ಅರ್ಜಿ ಸಲ್ಲಿಸಲಾಗಿತ್ತು. ಪಡೀಲ್-ಕಣ್ಣೂರು-ಅಡ್ಯಾರ್-ಸಹ್ಯಾದ್ರಿ-ಅರ್ಕುಳ ಭಾಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು. ಅಡ್ಯಾರ್ ಕಣ್ಣೂರು ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ನಾಳೆ (ಎ.18) ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ. ಕರ್ನಾಟಕ ಉಲಮಾ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಲಿದೆ.
