Kodagu: ಕೊಡಗು (Kodagu) ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳ ಹಾಗೂ ಮಾನವ ಸಂಘರ್ಷ ನಿರಂತರವಾಗಿ ಮುಂದುವರಿದಿದ್ದು, ಮಾನವ ಮತ್ತು ವನ್ಯಪ್ರಾಣಿ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಅಧಿಕಾರಿಗಳು ಅಗತ್ಯ ಕಾರ್ಯಯೋಜನೆ ರೂಪಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಇದ್ದು, ಇವುಗಳನ್ನು ತಡೆಯಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿ ಕಾರ್ಯಕ್ರಮ ರೂಪಿಸಬೇಕು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಅರಣ್ಯ ಸಚಿವರ ಜೊತೆ ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಅರಣ್ಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಮಸ್ಯೆಗಳಿದ್ದು, ಬೆಂಗಳೂರಿನಲ್ಲಿ ಅರಣ್ಯ ಸಚಿವರು, ಕೊಡಗು ಜಿಲ್ಲೆಯ ಶಾಸಕರು, ಅರಣ್ಯ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಸಭೆ ನಡೆಸುವ ಬಗ್ಗೆ ಚರ್ಚಿಸಿದರು.
