PM Modi: ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ (PM Modi) ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆದು ಪ್ರಧಾನಿ ನರೇಂದ್ರ ಮೋದಿ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ ನೀಡುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ.
ಯಾವ ಸಮಯಕ್ಕೆ, ಯಾವ ಜಾಗದಲ್ಲಿ, ಯಾವ ರೀತಿಯಲ್ಲಿ ದಾಳಿ ಮಾಡಬೇಕು ಅಥವಾ ಕ್ರಮ ತೆಗೆದುಕೊಳ್ಳಬೇಕೆಂಬುದನ್ನು ನಿರ್ಧರಿಸುವ ಸ್ವಾತಂತ್ರ್ಯವನ್ನು ಮೋದಿ ಸಶಸ್ತ್ರ ಪಡೆಗಳಿಗೆ ನೀಡುವ ಮೂಲಕ ಸೇನಾ ಪಡೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ.
ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳಿಗೆ ‘ಸಂಪೂರ್ಣ ಸ್ವಾತಂತ್ರ್ಯ’ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ದೆಹಲಿಯ ಪ್ರಧಾನಿ ಮೋದಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಪ್ರಧಾನಿಯವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ತಮ್ಮ ನಿರ್ಧಾರ ಘೋಷಿಸಿದ್ದಾರೆ.
ಭಯೋತ್ಪಾದನೆಗೆ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಮೋದಿ ಮತ್ತೆ ದೃಢಪಡಿಸಿದ್ದಾರೆ. ‘ಭಾರತೀಯ ಸೇನೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ’ ಎಂದು ಮೋದಿ ಹೇಳಿದ್ದಾರೆ.
